ಬರೀ ಕಾನೂನಿದ್ರೆ ಸಾಲದು! ಸರೀಗ್ ಜಾರೀ ಮಾಡ್ಬೇಕು ಮೇಷ್ಟ್ರೇ..

ಕರ್ನಾಟಕ ರಾಜ್ಯ ಶಿಕ್ಷಣ ಮಂತ್ರಿಗಳಾದ ಮಾನ್ಯ ಶ್ರೀ ಕಾಗೇರಿಯವರಿಗೆ ಅಭಿನಂದನೆಗಳು. ಅಂತೂ ಪ್ರಾಮಾಣಿಕತೆಯಿಂದ "ಸರ್ಕಾರ ತನ್ನ ಕೆಲಸಾನ ಸರಿಯಾಗಿ ಮಾಡ್ತಿಲ್ಲಾ" ಅಂತಾ ಒಪ್ಕೊಂಡಿದಾರೆ.

ಮಾನ್ಯತೆ ನೀಡಲು ಸಿ.ಬಿ.ಎಸ್.ಇ ಬೋರ್ಡು ವಿಧಿಸಿರೋ ಕರಾರು...

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿ.ಬಿ.ಎಸ್.ಇ) ತನ್ನ ಪಠ್ಯಕ್ರಮವನ್ನು ಅನುಸರಿಸಲು ಸಿದ್ಧವಾಗಿರೋ ವಿದ್ಯಾಸಂಸ್ಥೆಗಳಿಗೆ ಆಯಾ ರಾಜ್ಯಸರ್ಕಾರದಿಂದ ನಿರಪೇಕ್ಷಣಾ ಪತ್ರ (N.O.C) ಸಲ್ಲಿಸಬೇಕು ಅನ್ನೋ ನಿಯಮಾನ ಹೊಂದಿದೆ. ಖಾಸಗಿ, ಅನುದಾನಿತ, ಸರ್ಕಾರಿ ಯಾವುದೇ ಶಾಲೆಯಿದ್ದರೂ ಸರ್ಕಾರದ ಅನುಮತಿಯಿಲ್ಲದೆಯೇ ಮಾನ್ಯತೆಯನ್ನು ನೀಡುವಂತೆ ಇಲ್ಲ.

ನಿರಪೇಕ್ಷಣಾ ಪತ್ರ ಕೊಡಲು ಇರೋ ನಿಯಮಾ...

ಕರ್ನಾಟಕ ಸರ್ಕಾರವೂ ಕೂಡಾ ಸಿ.ಬಿ.ಎಸ್.ಇ ಶಾಲೆಗಳಿಗೆ ನಿರಪೇಕ್ಷಣಾ ಪತ್ರ ಕೊಡಕ್ಕೆ ಅಂತಾನೆ ಒಂದು ನಿಯಮಾನಾ 1989ರಲ್ಲೇ ಮಾಡಿದೆ. ಅದುಕ್ಕೆ ಆಗಿಂದಾಗ್ಗೆ
ತಿದ್ದುಪಡಿಗಳನ್ನೂ ಮಾಡಿಕೊಂಡು ಬಂದಿದೆ. ಈ ನಿಯಮದಲ್ಲಿರೋ ಪ್ರಮುಖವಾದ ಅಂಶಗಳು ಹೀಗಿವೆ.
- ಒಂದರಿಂದ ಐದನೇ ತರಗತಿಯವರೆಗೆ ಕಡ್ಡಾಯವಾಗಿ ಮಾತೃಭಾಷೆ ಅಥವಾ ಕನ್ನಡ ಮಾಧ್ಯಮವನ್ನು ಹೊಂದಿರತಕ್ಕದ್ದು.
- ರಾಜ್ಯದಿಂದ ರಾಜ್ಯಕ್ಕೆ ವರ್ಗಾವಣೆಗೆ ಬದ್ಧರಾದ ಅಖಿಲ ಭಾರತ ಸೇವೆ, ಕೇಂದ್ರ ಸರ್ಕಾರದ ಸೇವೆ ಮತ್ತು ಕೇಂದ್ರ ಸರ್ಕಾರದ ಉದ್ದಿಮೆಗಳಿಗೆ ಸೇರಿದ ಪೋಷಕರ ಮಕ್ಕಳಿದ್ದಲ್ಲಿ (ಇದನ್ನು ಪುಷ್ಟೀಕರಿಸಲು ಸಂಬಂಧಪಟ್ಟ ಇಲಾಖೆ/ ಸಂಸ್ಥೆಗಳಿಂದ ಧೃಡೀಕರಣ ಪತ್ರ ಸಲ್ಲಿಸುವುದು)
- ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಶಾಖೆಗಳನ್ನು ಹೊಂದಿದ ಹಾಗೂ ಅಂತರ ರಾಜ್ಯ ವರ್ಗಾವಣೆಗೆ ಒಳಪಡುವ ಬ್ಯಾಂಕ್‍ಗಳು, ಸಂಸ್ಥೆಗಳು (ಫರ್ಮುಗಳು) ಅಥವಾ ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳಿದ್ದಲ್ಲಿ (ಇದನ್ನು ಪುಷ್ಟೀಕರಿಸಲು ಸಂಬಂಧಪಟ್ಟ ಬ್ಯಾಂಕ್/ ಸಂಸ್ಥೆಗಳಿಂದ ಧೃಡೀಕರಣ ಪತ್ರ ಸಲ್ಲಿಸುವುದು)
- ಸರ್ಕಾರವು ಕಾಲಕಾಲಕ್ಕೆ ಹೊರಡಿಸಿರುವ ಸೂಚನೆಗಳನ್ನು ಪಾಲಿಸಿರಬೇಕು/ ಪಾಲಿಸಬೇಕು.

ಇದಕ್ಕೆ 2002ರಲ್ಲಿ ಒಂದು ತಿದ್ದುಪಡಿ ಮಾಡಿ, ‘ಕರ್ನಾಟಕ ರಾಜ್ಯಸರ್ಕಾರದ ಭಾಷಾನೀತಿಯನ್ನು ಕಾಲಕಾಲಕ್ಕೆ ನಿಗದಿಪಡಿಸಿದಂತೆ ಪಾಲಿಸತಕ್ಕದ್ದು’ ಎಂದು ಸೇರಿಸಿದ್ದಾರೆ.

ಇನ್ನಾದ್ರೂ ಕಾನೂನು ಪಾಲನೆ ಮಾಡ್ತಾರಾ?

ಇದರ ಬೆನ್ನ ಹಿಂದೆಯೇ ಇವತ್ತಿನ (30.01.2011) ದಿನಪತ್ರಿಕೆಗಳಲ್ಲಿ ಇನ್ನೆರಡು ಕೇಂದ್ರೀಯ ಶಾಲೆಗಳನ್ನು ತೆರೆಯೋದಾಗಿ ಭಾರತೀಯ ವಿದ್ಯಾಭವನ ಹೇಳಿದೆ. ಈಗ ಕಾಗೇರಿಯವರು ಈ ಶಾಲೆಗಳಲ್ಲಿ "ವರ್ಗಾವಣೆಗೆ ಈಡಾಗಬಲ್ಲ ಪೋಷಕರ ಸಂಖ್ಯೆಯ ಬಗ್ಗೆ" ಪ್ರಮಾಣಪತ್ರ ಪಡ್ಕೊಳ್ಳೋಕೆ ಮುಂದಾಗ್ತಾರಾ? ಈಗಾಗಲೇ ಸಾವಿರಾರು ಸಂಖ್ಯೆಲಿರೋ ಶಾಲೆಗಳು ಈ ನಿಯಮಗಳನ್ನು ಪಾಲಿಸುತ್ತಾ ಇವೆಯಾ? ಇಲ್ಲದ ಶಾಲೆಗಳ ಅನುಮತಿ ರದ್ದು ಮಾಡ್ತಾರಾ? ಈ ಹಿಂದಿನ ಸರ್ಕಾರಗಳು ಮಾಡಿದ "ಇರೋ ಕಾನೂನು ಪಾಲಿಸದ ಅಪರಾಧ"ಕ್ಕೆ ಪ್ರಾಯಶ್ಚಿತ್ತ ಮಾಡ್ಕೋತಾರಾ?ನೀವೇನಂತೀರಾ ಗುರೂ?

0 ಅನಿಸಿಕೆಗಳು:

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails